Wednesday, 14th May 2025

ಬೆತ್ತಲೆ ಮೆರವಣಿಗೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲು ಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ಈಗಾಗಲೇ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೇ 4ರಂದು ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ–ಜೋ ಬುಡ ಕಟ್ಟು ಮಹಿಳೆಯರನ್ನು ಬೆತ್ತಲು ಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

Leave a Reply

Your email address will not be published. Required fields are marked *