Saturday, 10th May 2025

HD Kumaraswamy: ಪಂಚಮಸಾಲಿ ಹೋರಾಟ ಹತ್ತಿಕ್ಕಲು ರಾಜ್ಯ ಸರ್ಕಾರದಿಂದ ಹಿಟ್ಲರ್ ಮಾರ್ಗ; ಎಚ್‌ಡಿಕೆ ಟೀಕೆ

HD Kumaraswamy

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರ್ಕಾರ ಎಂದು ಅವರು ಹರಿಹಾಯ್ದಿದ್ದಾರೆ.

ಈ ಸುದ್ದಿಯನ್ನೂ ಓದಿ | Job Guide: ನ್ಯಾಷನಲ್‌ ಹೈಡ್ರೋಎಲೆಕ್ಟ್ರಿಕ್‌ ಪವರ್‌ ಕಾರ್ಪೋರೇಷನ್‌ನ 118 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರ್ಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರ್ಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Power Cut: ಡಿ.11, 12ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸರ್ಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರ್ಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದಿರುವ ಅವರು, ಸಿದ್ದರಾಮಯ್ಯ ಅವರನ್ನು ಸರ್ವಾಧಿಕಾರಿ ಎಂದು ಕರೆದು ಅವರ ಸರ್ಕಾರವನ್ನು ತುಘಲಕ್ ಸರ್ಕಾರ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.