Sunday, 11th May 2025

ಜು.14ರ ವರೆಗೆ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜು.14ರ ವರೆಗೆ ಕರಾವಳಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ದಿನಪೂರ್ತಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರಿಯಲಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿಯೂ ಮಳೆ ಪ್ರಕೋಪ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸ ಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕಾವೇರಿ ನದಿಗೆ ಸ್ನಾನಕ್ಕೆಂದು ಇಳಿದು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ಪ್ರವಾಸಿಗನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ದೂಧ್‌ಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರು ಪ್ರವಾಹದ ಆತಂಕದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಆರು ಸೇತುವೆಗಳು ಜಲಾವೃತಗೊಂಡಿವೆ.