Monday, 12th May 2025

ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 20 ಜನಕ್ಕೆ ಗಾಯ

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯ ಗೊಂಡಿದ್ದಾರೆ.

ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ದ್ದಾರೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ. ಮಿನಿವ್ಯಾನ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಯಲ್ಲರೆಡ್ಡಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಗಾಯಗೊಂಡ ಇಬ್ಬರು ಬಾನ್ಸವಾಡ ಸರ್ಕಾರಿ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡ ಪ್ರಯಾಣಿಕರು ಪಿಟ್ಲಂ ಮಂಡಲದ ಚಿಲ್ಲರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ತೆಲಂಗಾಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಜತೆಗೆ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.