Sunday, 11th May 2025

ಪ್ರಧಾನಿ ಭದ್ರತಾ ಲೋಪ ವಿಚಾರಣೆಗೆ ನಿ.ನ್ಯಾಯಾಧೀಶರ ನೇತೃತ್ವದ ತನಿಖಾ ಸಮಿತಿ ರಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ.

ಡಿಜಿಪಿ ಚಂಡೀಗಢ, ಎನ್‌ಐಎ ಐಜಿ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಭಾಗವಾಗಿರುವ ಸಮಿತಿ ಸ್ಥಾಪಿಸುವ ಕುರಿತು ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ಹೊರಡಿಸಲಾಗುವುದು ಎಂದು ಹೇಳಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್‌ ನ ಫಿರೋಝ್‌ ಪುರದಲ್ಲಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ನಡೆದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ವಕೀಲರ ಧ್ವನಿ ಎಂಬ ಸಂಘಟನೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಜ.5 ರಂದು, ಫಿರೋಜ್‌ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿಯವರ ಬೆಂಗಾವಲು ಪಡೆ ಹೆದ್ದಾರಿಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಬಳಿಕ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗದೆ ವಾಪಸ್ಸಾಗಿದ್ದರು.

ಪ್ರಧಾನಿ ಮೋದಿ ಅವರ ಫಿರೋಜ್‍ಪುರ ಭೇಟಿಯ ಸಂದರ್ಭದಲ್ಲಿ ಭದ್ರತಾ ಲೋಪವನ್ನು ತನಿಖೆ ಮಾಡುವ ಕೇಂದ್ರ ತಂಡವು ಶುಕ್ರವಾರ ಪಂಜಾಬಿಗೆ ತೆರಳಿತ್ತು. ಆದರೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದು, ಈ ವಿಷಯದಲ್ಲಿ 150 ಮಂದಿಯ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ ಮತ್ತು ದ್ವಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದೆ.