Tuesday, 13th May 2025

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ: ಫಾರೂಕ್

ಶ್ರೀನಗರ: ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್‌ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ.

ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರಪತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ತಮ್ಮ ಹೆಸರು ಪ್ರಸ್ತಾಪಿಸಿರುವುದಕ್ಕೆ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿರುವ ಅವರು, ‘ಮಮತಾ ದೀದಿ ಅವರು ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಂತೆ ವಿರೋಧ ಪಕ್ಷದ ಹಲವು ನಾಯಕರು ಕರೆ ಮಾಡಿ ಬೆಂಬಲ ಸೂಚಿಸಿದರು. ಈ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಪಕ್ಷದ ಹಿರಿಯ ನಾಯಕರು ಮತ್ತು ಕುಟುಂಬದವರ ಜತೆ ಚರ್ಚಿಸಿದ್ದೇನೆ’ ಎಂದು ಫಾರೂಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲಾಗುವುದು’ ಎಂದು ಪಕ್ಷವು ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.