Monday, 12th May 2025

ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಫೈನಲ್: ಮೇ 20 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರು ಉಪಮುಖ್ಯಮಂತ್ರಿ ಯಾಗಿ ಪದಗ್ರಹಣ ಮಾಡಲಿದ್ದಾರೆ. ಮೇ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಶಾಸಕಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಂಬಂಧ ಗುರುವಾರ ಸಂಜೆ 7 ಗಂಟೆಗೆ ಇಂದಿರಾ ಗಾಂಧಿ ಭವನದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಾಗುತ್ತದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿ ಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿ ಕೈಗೊಂಡ ತೀರ್ಮಾನವನ್ನು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸಲಾಗುತ್ತದೆ.

ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಯಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.