ಚಿಕ್ಕಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ ಹಲವು ಅವಕಾಶ ಕಲ್ಪಿಸುವ ಇ-ಶ್ರಮ್ ಯೋಜನೆಯಡಿ ನೋಂದಣಿ ಕುರಿತು ಜಿಲ್ಲೆ ಯಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಲಕ್ಷ್ಮೀಕಾಂತ್ ಜೆ.ಮಿಸ್ಕಿನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸಂಚಾರಿ ವಾಹನಕ್ಕೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಇ-ಶ್ರಮ್ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾ ಡುತ್ತಾ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೋಂದಣಿಯಾಗುವ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ೧೪ ದಿನಗಳ ಕಾಲ ವಾಹನವು ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.
ಅರ್ಹ ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ಇ.ಎಸ್.ಐ ಮತ್ತು ಪಿ.ಎಫ್ ಸದಸ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು ೩೭೯ ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಇತರೆ ವರ್ಗಗಳ ಅಸಂಘಟಿತ ಕಾರ್ಮಿಕರು ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ) ಮೂಲಕ ಅಥವಾ ಆನ್ಲೈನ್ ನಲ್ಲಿ ಸ್ವಯಂ ನೋಂದಣಿ ಆಗಬಹುದು ಅಥವಾ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸದರಿ ಯೋಜನೆಯಡಿ ನೋಂದಾಯಿಸಿ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಕೋರಿದರು.
ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮೀ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರು, ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.