Sunday, 11th May 2025

ಬಿಜೆಪಿಯವರು ನೂರು ಜನ್ಮ ಎತ್ತಿದರೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಡಿಸಿಎಂ

ಬೆಂಗಳೂರು: “ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗೆ 10 ಹೆಚ್.ಪಿ ಉಚಿತ ವಿದ್ಯುತ್, ಕೃಷ್ಣ ಅವರ ಕಾಲದಲ್ಲಿ ಸ್ತ್ರೀಶಕ್ತಿ ಸಂಘ ಯೋಜನೆ ಜಾರಿಗೆ ಬಂದಿತು. ಇದರಲ್ಲಿ ಯಾವುದಾದರೂ ಒಂದು ಯೋಜನೆಯನ್ನು ನಿಲ್ಲಿಸಲಾಗಿದೆಯೇ? ಬಡವರಿಗೆ ನಿವೇಶನ, ಮನೆ ನೀಡುವ ಯೋಜನೆ ನಿಂತಿದೆಯೇ? ಇಲ್ಲ. ಅದೇ ರೀತಿ ಬಿಜೆಪಿಯವರು ನೂರು ಜನ್ಮ ತಳೆದರೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ” ಎಂದು ವಾಗ್ದಾಳಿ ನಡೆಸಿದರು.

“ಪದ್ಮನಾಭನಗರದಲ್ಲಿ ನಮ್ಮ ಕಾರ್ಯಕರ್ತರ ಹುಮ್ಮಸ್ಸು, ಶಕ್ತಿ ಸ್ಫೂರ್ತಿ ನೋಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ನಮ್ಮ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನಮ್ಮ ಈ ಐದು ಗ್ಯಾರಂಟಿ ಯೋಜನೆಗಳ ಜಾರಿ ಬಂದಿದ್ದು ಯಾಕೆ? ಇವುಗಳ ಅವಶ್ಯಕತೆ ಏನು ಎಂಬುದು ಪ್ರಮುಖವಾದ ವಿಚಾರವಾಗಬೇಕು. ಅಧಿಕಾರ ಬರುತ್ತದೆ, ಹೋಗುತ್ತದೆ. ರಾಜಕಾರಣ ಎಂದ ಮೇಲೆ ಗೆಲುವು, ಸೋಲು ಇರುತ್ತದೆ. ಆದರೆ ಕಾಂಗ್ರೆಸ್ ಪಕ್ಷ ಸದಾ ಜನರ ಬದುಕಿನ ಬಗ್ಗೆ ಆಲೋಚಿಸುತ್ತದೆ. ಜನರ ಬದುಕು ಕಟ್ಟುವ ಕೆಲಸ ಮಾಡುತ್ತದೆ. ಬಿಜೆಪಿಯವರು ದೇವರು, ಧರ್ಮ, ಜಾತಿ ಆಧಾರವಾಗಿ, ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ” ಎಂದು ತಿಳಿಸಿದರು.

ನಿಮ್ಮ ಮನೆಯ ಜ್ಯೋತಿ ಬೆಳಗಲಿ ಎಂದು 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಸುಮಾರು 1.50 ಕೋಟಿ ಮನೆಗಳು ವಿದ್ಯುತ್ ಬಿಲ್ ಕಟ್ಟುತ್ತಿಲ್ಲ. ಬಡ ಕುಟುಂಬದ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ ನೀಡಲು ಮುಂದಾದಾಗ, ಅತ್ತೆ ಸೊಸೆ ಮಧ್ಯೆ ಜಗಳ ತಂದಿಡ ಲಾಗುತ್ತಿದೆ ಎಂದು ವಿಪಕ್ಷಗಳು ಅಪಪ್ರಚಾರ ಮಾಡಿದವು. ಯಾರ ಮನೆಯಲ್ಲಾದರೂ ಅತ್ತೆ ಸೊಸೆ ಈ ವಿಚಾರಕ್ಕೆ ಜಗಳ ಆಡಿದ್ದಾರಾ? ಈ ಯೋಜನೆ ಹಣ ಒಂದು ತಿಂಗಳು ಹೆಚ್ಚು ಕಮ್ಮಿಯಾಗಿ ಬಂದಿರಬಹುದು. ಆದರೆ ಕಳೆದ ಒಂದು ವರ್ಷದಲ್ಲಿ ಬಹುತೇಕ ಹಣ ಬಂದಿದೆ. ಇನ್ನು ಅನ್ನಭಾಗ್ಯ ಯೋಜನೆ ಯಲ್ಲಿ 5 ಕೆ.ಜಿ ಅಕ್ಕಿ, 5 ಕೆ.ಜಿ ಅಕ್ಕಿ ಹಣ ನೀಡುತ್ತಿದ್ದೇವೆ” ಎಂದರು.

ದುಡಿಯುವ ಮಹಿಳೆಯರು ಕೆಲಸಕ್ಕೆ ಹೋಗುವಾಗ ಬಸ್ ಪ್ರಯಾಣ ದರದ ಹೊರೆಯನ್ನು ಇಳಿಸಲು ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು ದೇವಾಲಯ, ಸಂಬಂಧಿಕರ ಮನೆಗೆ ಹೋಗಲು ಅನುಕೂಲ ವಾಗಿದೆ. ಇನ್ನು ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇಂತಹ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದಾದರೂ ಒಂದು ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ನೀಡಿದ್ದಾರಾ? ಯಡಿಯೂರಪ್ಪ, ಸದಾನಂದ ಗೌಡರು, ಜಗದೀಶ್ ಶೆಟ್ಟರ್, ಬೊಮ್ಮಾಯಿ, ಆರ್.ಅಶೋಕ್ ಅವರು ಕೊಟ್ಟಿದ್ದಾರಾ? ಜೆಡಿಎಸ್ ಅವಧಿಯಲ್ಲಿ ನೀಡಿದ್ದಾರೆಯೇ?” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಬಿಜೆಪಿಯವರೂ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಿದ್ದರೆ ಅಶೋಕ್ ಅವರು ತಮ್ಮ ಕಾರ್ಯಕರ್ತರಿಗೆ ಹೇಳಿ ಈ ಗ್ಯಾರಂಟಿ ಯೋಜನೆ ಪ್ರಯೋಜನ ಪಡೆಯದಂತೆ ಸಲಹೆ ನೀಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಸಂವಿಧಾನವೇ ನೀಡಿದೆ. ವಿರೋಧ ಪಕ್ಷದ ನಾಯಕರ ಕ್ಷೇತ್ರದಿಂದಲೇ ಈ ಗ್ಯಾರಂಟಿ ಯೋಜನೆಗಳ ಸಮಿತಿಯನ್ನು ಕಚೇರಿ ಉದ್ಘಾಟನೆ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಚಾಲನೆ ನೀಡಲಾಗುವುದು” ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯೇ ಬೇರೆ, ವಿಧಾನಸಭಾ ಕ್ಷೇತ್ರ ಚುನಾವಣೆಯೇ ಬೇರೆ. ಪಾಲಿಕೆ ಚುನಾವಣೆಯೂ ಮುಂದಿನ ದಿನಗಳಲ್ಲಿ ನಡೆಯಲಿದೆ. ದುಡಿಮೆಯ ಶಕ್ತಿ ಈ ಕೈ. ಇಂದಿರಾ ಗಾಂಧಿ ಅವರು ಕೊಟ್ಟ ಈ ಕೈಯನ್ನು ಸುಭದ್ರವಾಗಿ ಕಾಪಾಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ತಿಳಿಸಿದರು.

“ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಿದ್ದೇವೆ. ರಾಜ್ಯಮಟ್ಟದಲ್ಲಿ ಹೆಚ್.ಎಂ ರೇವಣ್ಣ ಅವರ ಅಧ್ಯಕ್ಷತೆ ಹಾಗೂ ಐವರು ಉಪಾಧ್ಯಕ್ಷರುಗಳ ಸಮಿತಿ ರಚಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಸಮಿತಿಗಳಲ್ಲಿ ಅಧ್ಯಕ್ಷರು ಹಾಗೂ 14 ಮಂದಿ ಸದಸ್ಯರ ಸಮಿತಿ ಮಾಡಲಾಗಿದೆ. ಅಧ್ಯಕ್ಷರುಗಳು ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾಗಿರುತ್ತಾರೆ. ಅವರು ಕ್ಷೇತ್ರ ಹಾಗೂ ತಾಲೂಕುಗಳಲ್ಲಿ ಹಾಗೂ ವಾರ್ಡ್ ಗಳಲ್ಲಿ ಕಚೇರಿ ನೀಡಲು ಆದೇಶ ನೀಡಿದ್ದೇವೆ” ಎಂದರು.

“ಜನರಿಗೆ ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಈ ಐದು ಯೋಜನೆಗಳನ್ನು ಜಾರಿ ಮಾಡಲು ಈ ಸಮಿತಿ ರಚಿಸಲಾಗಿದೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *