Sunday, 11th May 2025

ಗಡಿಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ

ಸಿ.ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕರ್ನಾಟಕಕ್ಕೆ ಹೊಂದಿಕೊಂಡಿ ರುವ ಕೇರಳ ಮತ್ತು ಮಹಾರಾಷ್ಟ್ರ ದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ ಹಬ್ಬದ ಬಳಿಕ ಕೋವಿಡ್ ತಜ್ಞರ ಸಭೆ ಕರೆಯಲಾಗು ವುದು. ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳನ್ನು ಸಡಿಲ‌ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು.

ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧವೂ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. ೨ ವರ್ಷದಿಂದ ೧೮ ವರ್ಷಗಳ ವಯೋಮಾನದವರಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಪ್ರಯೋಗ ಕೊನೆ ಹಂತದಲ್ಲಿದೆ. ಅದಕ್ಕೆ ಎಲ್ಲಾ ರೀತಿಯ ಒಪ್ಪಿಗೆ ದೊರೆತ ತಕ್ಷಣ ಮಕ್ಕಳು ಮತ್ತು ಯುವ ವಯಸ್ಕರಿಗೆ ಲಸಿಕೆ ಹಾಕಲಾಗುವುದು. ಒಟ್ಟಾರೆ ಲಸಿಕೆ ಹಾಕುವುದರಲ್ಲಿ ಕರ್ನಾಟಕ ಮುಂದಿದೆ ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪ್ರಕರಣಗಳನ್ನು ದಾಖಲಿಸಿ, ಚಾರ್ಜ್ ಶೀಟ್ ಹಾಕಲಾಗಿರುವ ಬಗ್ಗೆ ಸುದ್ದಿಗಾರರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ , ಪೊಲೀಸ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ- ಪ್ರತಿ ಕ್ರಿಯೆಗಳು ಇದ್ದೇ ಇರುತ್ತವೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡಲು ನಾವೆಲ್ಲರೂ ಪ್ರಯತ್ನ ಪಡಬೇಕು. ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ ಎಂದು ಸಿಎಂ ನೈತಿಕ ಪೊಲೀಸ್ ಗಿರಿ ಬಗ್ಗೆ ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *