ದುಬೈ: ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ICC) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಜಯ್ ಶಾ (Jay Shah) ಅವರು ಇಂದು(ಡಿ.1) ಅಧಿಕೃತವಾಗಿ ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸಿದರು. ಆಗಸ್ಟ್‌ನಲ್ಲಿಅಧ್ಯಕ್ಷೀಯ ಪದವಿಗೆ ನಡೆದ ಚುನಾವಣೆಯಲ್ಲಿ ಜಯ್ ಶಾ ಅವರು ಏಕೈಕ ಸ್ಪರ್ಧಿಯಾಗಿದ್ದರು. ಹೀಗಾಗಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಹುದ್ದೆ ಅಲಂಕರಿಸಿದ ಅತಿ ಕಿರಿಯ ಎನ್ನುವ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ.
ಜಯ್ ಶಾ ಅಕ್ಟೋಬರ್ 2019 ರಿಂದ ಬಿಸಿಸಿಐ ಗೌರವ ಕಾರ್ಯದರ್ಶಿಯಾಗಿ ಮತ್ತು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಜಯ್ ಶಾ ಅವರಿಂದ ತೆರವಾದ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಮೂಲಗಳ ಪ್ರಕಾರ ದಿವಂಗತ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.
A new chapter of global cricket begins today with Jay Shah starting his tenure as ICC Chair.
ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್ ಶಾಗೆ ಐಸಿಸಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದೆ. ಶಾ ಅವರು ಕ್ರಿಕೆಟ್‌ನ ಜಾಗತಿಕ ವ್ಯಾಪ್ತಿಯನ್ನು ಮತ್ತು ಜನಪ್ರಿಯತೆಯನ್ನು ಹೆಚ್ಚಿಸುವ ವಿಶ್ವಾಸ ನಮಗಿದೆ ಎಂದು ಐಸಿಸಿ ಹೇಳಿದೆ.
ಜಯ್ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.