ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಸೇರಿ 7 ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಶಿವನಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ವಿಷಯ ಗೊತ್ತಾಗಿದೆ. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ನ್ಯಾಯಾಲಯದ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
ನಾವು ಸರ್ಕಾರವನ್ನು ಕೇಳುವುದು ಇಷ್ಟೇ, ಸೊಸೆಗೆ ಕಾಯಂ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಮಾಡುತ್ತೇವೆ. ಎಲ್ಲರಿಗೂ ಜಾಮೀನು ಸಿಕ್ಕಿದೆ ಎಂದು ಗೊತ್ತಾಗಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಬೇಲ್ ಆಗಿರಬಹುದು. ಆದರೆ, ಅಂತಿಮವಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | PSI Exam: ಪಿಎಸ್‌ಐ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್; ಚಳಿಗಾಲ ಅಧಿವೇಶನದ ಬಳಿಕ ನೇಮಕಾತಿ ಆದೇಶ ಪತ್ರ
ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ರಿಲೀಫ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 7 ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಜಾಮೀನು ಅರ್ಜಿಗಳ ಅರ್ಜಿಗಳ ವಿಚಾರಣೆಯನ್ನು ಡಿ.9ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟಿಸಿದೆ.
ಜೈಲಿನಲ್ಲಿದ್ದ ದರ್ಶನ್‌ಗೆ ಬೆನ್ನು ನೋವಿನ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅ.30ರಂದು ಹೈಕೋರ್ಟ್ ಆರು ವಾರ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡರೂ ಶಸ್ತಚಿಕಿತ್ಸೆ ನಡೆದಿರಲಿಲ್ಲ. ರಕ್ತದೊತ್ತಡ ಹಿನ್ನೆಲೆಯಲ್ಲಿ ಪೂರಕ ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಮತ್ತಷ್ಟು ದಿನ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಬೇಕು ಎಂದು ವಕೀಲರು ಮನವಿ ಮಾಡಿದ್ದರು. ಇದರಿಂದ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ್ದ ಕೋರ್ಟ್, ಇದೀಗ ದರ್ಶನ್ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಧ್ಯಂತರ ಜಾಮೀನು ಪಡೆದುಕೊಂಡಿದ್ದ ದರ್ಶನ್ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಷರತ್ತುಬದ್ಧ ಜಾಮೀನು ಮಂಜೂರು ಆಗಿದ್ದರಿಂದ ನಿರಾಳರಾಗುವಂತಾಗಿದೆ. ದರ್ಶನ್‌ಗೆ ಸದ್ಯ ಜಾಮೀನು ಸಿಕ್ಕಿದ್ದರೂ ಸಂಕಷ್ಟ ತಪ್ಪುವುದಿಲ್ಲ ಎನ್ನಲಾಗುತ್ತಿದೆ. ಯಾಕೆಂದರೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ತನಿಖಾಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.