ಚಿಕ್ಕಬಳ್ಳಾಪುರ: ಕರ್ನಾಟಕ ಪ್ರಾಂತ ರೈತ ಸಂಘದ (Raitha Sangha) ಅಧ್ಯಕ್ಷ ಹಾಗೂ ಸಿಪಿಎಂ (CPM) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ (GC Bayyareddy) ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.
ಹಲವು ವರ್ಷಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಇತ್ತು. ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಅವರನ್ನು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಗಡಿಗವಾರಹಳ್ಳಿ ಗ್ರಾಮದ ಬಯ್ಯಾರೆಡ್ಡಿ ರಾಜ್ಯದಾದ್ಯಂತ ರೈತ, ಕಾರ್ಮಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಜನಪರ ಹೋರಾಟಗಳಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1999ರ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂನಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಸಹ ನಡೆಸಿದ್ದರು.
ಇಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯ ವಿಚಾರಗಳ ಬಗ್ಗೆ ಕುಟುಂಬದ ಜೊತೆ ಚರ್ಚಿಸಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ.
— Siddaramaiah (@siddaramaiah) January 4, 2025
ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು… pic.twitter.com/KGLxnpq0KJ
“ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದುಃಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: Muzaffar Assadi: ಚಿಂತಕ, ಲೇಖಕ ಮುಜಾಫರ್ ಅಸ್ಸಾದಿ ನಿಧನ