Saturday, 10th May 2025

Karnataka Rain: ಮಳೆಯ ಅಬ್ಬರ; ನಾಳೆಯೂ ಕೊಡಗು, ದ.ಕನ್ನಡ ಸೇರಿ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

Karnataka Rain

ಬೆಂಗಳೂರು: ಫೆಂಗಲ್‌ ಚಂಡಮಾರುತ ಅಬ್ಬರದಿಂದ ಡಿ.3 ರಂದು ಕೂಡ ರಾಜ್ಯದ 9 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ (Karnataka Rain) ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಗಳವಾರವೂ ಕೊಡಗು, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಡಿ.3 ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು, ದಕ್ಷಿಣ ಕನ್ನಡ, ಕೋಲಾರ, ರಾಮನಗರ, ಮೈಸೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ
ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾಲೇಜು ಹೊರತುಪಡಿಸಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಫೆಂಗಲ್ ಚಂಡಮಾರುತದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರಿಂದ ಡಿ.3ರಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪದವಿ ಕಾಲೇಜಿಗೆ ನಾಳೆ ರಜೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Fengal Cyclone: ಫೆಂಗಲ್‌ ಆರ್ಭಟಕ್ಕೆ ತತ್ತರಿಸಿದ ತಮಿಳುನಾಡು; ಆಟಿಕೆಗಳಂತೆ ಕೊಚ್ಚಿ ಹೋದ ವಾಹನಗಳು

ಬಿರುಗಾಳಿ ಸಹಿತ ಭಾರಿ ಮಳೆ; ನಾಳೆ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಫೆಂಗಲ್‌ ಚಂಡಮಾರುತ ಪ್ರಭಾವದಿಂದ ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇನ್ನು ಐದು ದಿನ ರಾಜ್ಯದಲ್ಲಿ ಮಳೆಯ ಅಬ್ಬರ (Karnataka Rain) ಮುಂದುವರಿಯುವ ಮುನ್ಸೂಚನೆ ಸಿಕ್ಕಿದ್ದು, ಡಿ. 3ರಂದು ಕೊಡಗು, ಚಾಮರಾಜನಗರ ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಇನ್ನು ಕರಾವಳಿ ಭಾಗದಲ್ಲಿ ಗಂಟೆಗೆ 35ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಫೆಂಗಲ್‌ ಚಂಡಮಾರುತ ಪ್ರಭಾವದಿಂದ ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ತುಮಕೂರು, ರಾಮನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.

ಇನ್ನು ಡಿ. 4 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಡಿ. 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ವಿಜಯಪುರ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಡಿ. 6ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಡಿ.8ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.