Saturday, 10th May 2025

Manmohan Singh: ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh Passes away) ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.

ಬೆಂಗಳೂರು ವಿಶ್ವವಿದ್ಯಾಲಯದ (Bangalore University) ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ಮಾಹಿತಿ ನೀಡಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ಎನ್.ನಾಗರಾಜ್ ಮಾಹಿತಿ ನೀಡಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ‌ Non – NEP ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಪಿ.ಧರಣಿಕುಮಾರ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳು ರಜೆ ಇರಲಿದೆ. ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.

ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶ ರದ್ದು

ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

“ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

“ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು” ಎಂದು ತಿಳಿಸಿದರು.