ಬೆಂಗಳೂರು: ಮುಡಾ ಪ್ರಕರಣದಲ್ಲಿ (Muda Case) ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ನೋಟಿಸ್ ಇನ್ನೂ ಜಾರಿಯಾಗಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಕೀಲ ಕೆ. ಜಿ ರಾಘವನ್ ಮಾತನಾಡಿ, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿದರು.
ಇದೆ ವೇಳೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಿಬಿಐ ತನಿಖೆ ಕೋರಿರುವ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಹಾಗಾಗಿ ನೀವು ಏಕ ಸದಸ್ಯ ಪೀಠಕ್ಕೆ ಮನವಿ ಸಲ್ಲಿಸಬಹುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು ರಾಜ್ಯಪಾಲರ ಅನುಮತಿಯನ್ನು ಎತ್ತಿ ಹಿಡಿಯುವ ಮೂಲಕ ಏಕಸದಸ್ಯ ಪೀಠವು ಪ್ರಮಾದ ಎಸಗಿದೆ ಎಂದು ವಿವರಿಸಲು ಮುಂದಾದರು. ಆದರೆ ಇದಕ್ಕೆ ಪೀಠವು ಅನುಮತಿಸಲಿಲ್ಲ.
ಇನ್ನು ಮುಡಾ ಪ್ರಕರಣದಲ್ಲಿ ವಿವಾದದ ಕೇಂದ್ರವಾಗಿರುವ ಕೆಸರೆ ಗ್ರಾಮದಲ್ಲಿನ ಜಾಮೀನಿನ ಮಾಲೀಕ ಜೆ ದೇವರಾಜು ಪ್ರತಿನಿಧಿಸಿದ ಹಿರಿಯ ವಕೀಲ ದುಷ್ಯಂತ್ ದವೆ ಅವರು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿರುವ ಅರ್ಜಿಯಲ್ಲಿ ನೋಟಿಸ್ ಜಾರಿಯಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಗೆ ತನಿಖಾ ವರದಿ ಸಲ್ಲಿಸುವಂತೆ ಏಕಸದಸ್ಯ ಪೀಠ ಆದೇಶಿಸಿದೆ. ಈ ಪ್ರಕರಣದ ವಿಚಾರಣೆಯು ಡಿಸೆಂಬರ್ 10ಕ್ಕೆ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರದಲಿದೆ. ಇದರಲ್ಲಿ ನಮಗೆ ರಕ್ಷಣ ನೀಡಬೇಕು” ಎಂದು ಮನವಿ ಮಾಡಿದರು.
ಇದಕ್ಕೆ ಹಿರಿಯ ವಕೀಲರಾದ ಮಣೀಂದರ್ ಸಿಂಗ್ ಮತ್ತು ಕೆ ಜಿ ರಾಘವನ್ ಆಕ್ಷೇಪಿಸಿದರು. ಏಕಸದಸ್ಯ ಪೀಠದಲ್ಲಿ ನೋಟಿಸ್ ಮಾತ್ರವಾಗಿದೆ. ರಕ್ಷಣೆ ಕೋರುವ ಯಾವುದೇ ಬೆಳವಣಿಗೆಯಾಗಿಲ್ಲ. ಹೀಗಾಗಿ, ಮೇಲ್ಮನವಿದಾರರ ಮನವಿಯನ್ನು ಪುರಸ್ಕರಿಸಬಾರದು. ಮೇಲ್ಮನವಿದಾರರ ಪರ ಹಿರಿಯ ವಕೀಲರು ಮಧ್ಯಂತರ ಆದೇಶ ಪಡೆಯಲು ತಂತ್ರ ರೂಪಿಸಿದ್ದಾರೆ ಎಂದು ಆಕ್ಷೇಪಿಸಿದರು. ಇದಕ್ಕೆ ಸಹಮತಿಸಿದ ಪೀಠವು, ಏಕಸದಸ್ಯ ಪೀಠದ ಮುಂದಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದಿಲ್ಲಎಂದು ತಿಳಿಸಿದೆ.
ಮುಡಾ ಹಗರಣ; ಸಿಎಂ ಮೇಲ್ಮನವಿ ವಿಚಾರಣೆ ಜ.25ಕ್ಕೆ ಮಂದೂಡಿಕೆ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ (Muda Case) ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿದೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.
ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಸಿಂಫ್ಟಿ ವಾದ ಮಂಡನೆ ಮಾಡಿ, ಏಕಸದಸ್ಯ ಪೀಠದ ಆದೇಶದಲ್ಲಿ ಸಾಕಷ್ಟು ಲೋಪಗಳಿವೆ. 17 ಎ ನಿಯಮವನ್ನು ಸಂಪೂರ್ಣವಾಗಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಪೊಲೀಸ್ ಅಧಿಕಾರಿಮೂಲಕವೇ ಅನುಮತಿ ಕೋರಬೇಕು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಇದನ್ನು ನಿರ್ಲಕ್ಷಿಸಿದೆ. ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಹೇಳಿದರು.
ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ವಾದ ಮಂಡಿಸಿ, ನಮ್ಮ ಕಕ್ಷಿದಾರರಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ವಿಚಾರಣೆಗೊಳಪಡಬೇಕಾಗಿದೆ. ಹೀಗಾಗಿ ಮೇಲ್ಮನವಿ ಪ್ರಶ್ನಿಸಿದ್ದೇವೆ. ರಾಜ್ಯಪಾಲರ ಅನುಮತಿ ಸರಿಯೋ ತಪ್ಪೋ ಎಂದಷ್ಟೇ ಹೇಳಬೇಕಿತ್ತು, ಆದರೆ ಹೈಕೋರ್ಟ್ ಏಕಸದಸ್ಯ ಪೀಠ ದೇವರಾಜು ವಿರುದ್ಧ ಆದೇಶ ನೀಡಿದೆ. ದೇವರಾಜು ವಾದ ಅಲಿಸದೇ ಆದೇಶ ಹೈಕೋರ್ಟ್ ಆದೇಶ ನೀಡಿದೆ ಇದು ಒಪ್ಪುವಂತದಲ್ಲ ಎಂದು ಹೇಳಿದರು.
ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿ, ಮೇಲ್ಮನವಿದಾರರು ಪರಸ್ಪರ ಶಾಮೀಲಾಗಿ ವಾದ ಮಂಡಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಾತ್ರ ಪರಸ್ಪರ ಸಂಬಂಧವಿಲ್ಲವೆಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ಕೋರ್ಟ್, ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.
ಈ ಸುದ್ದಿಯನ್ನೂ ಓದಿ | HD Devegowda: ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾ! ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಎಚ್.ಡಿ. ದೇವೇಗೌಡ