Sunday, 11th May 2025

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರವರೆಗೆ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರ್ಕಳದಲ್ಲಿ 4, ಹುಂಚದಕಟ್ಟೆಯಲ್ಲಿ3 ಸೆಂ. ಮೀ. ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 28 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಂ. ದಾಖಲಾಗಿದೆ.

ಕಳೆದ ವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಅವಾಂತರ ಸೃಷ್ಟಿಯಾಗಿತ್ತು. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಾರವಾದ ಹಾನಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಕಾರವಾರಕ್ಕೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಭೇಟಿ ನೀಡಲಿದ್ದಾರೆ.

ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಮಂಗಳವಾರ 1,09,760 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಬುಧವಾರ 70 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಗಿದೆ.

ಮಂಗಳವಾರ 22 ಕ್ರೆಸ್ಟ್‌ಗೇಟ್‌ಗಳನ್ನು ತೆಗೆದು ನದಿಗೆ 70 ಸಾವಿರ ಕ್ಯುಸೆಕ್ ನೀರನ್ನು ಬಿಡಲಾಗಿತ್ತು.  ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ದುಬಾರೆಯ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ಜಲಕ್ರೀಡೆಯನ್ನು ರದ್ದುಗೊಳಿಸಲಾಗಿದ್ದು, ಪ್ರವಾಸಿಗರಿಗೆ ನಿರಾಸೆ ಯಾಗಿದೆ.

Leave a Reply

Your email address will not be published. Required fields are marked *