Tuesday, 13th May 2025

ನೈಟ್‌ ಕರ್ಫ್ಯೂ ಬಳಿಕ ಹತ್ತು ದಿನ ಲಾಕ್‌ ಡೌನ್‌ ?

ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ

ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ

ಬೆಂಗಳೂರು: ರಾಜ್ಯದ ಜನತೆ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್‍ಡೌನ್ ಜಾರಿ ಅನಿವಾರ್ಯ ವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಲಾಕ್‍ಡೌನ್ ಜಾರಿ ಮಾಡಬಾರದೆಂದರೆ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಸರ್ಕಾರ ಲಾಕ್‍ಡೌನ್‍ ನಂತಹ ನಿಯಮಗಳನ್ನು ಜಾರಿ ಮಾಡಲೇಬೇಕಾಗುತ್ತದೆ ಎಂಬ ಸುಳಿವು ನೀಡಿದರು.

ಮಹಾರಾಷ್ಟ್ರದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡದಿದ್ದ ಕಾರಣ ಶುಕ್ರವಾರದಿಂದ ಸೋಮವಾರದವರಗೆ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಅಲ್ಲಿ ವಾಹನ ಸಂಚಾರಕ್ಕೂ ಅವಕಾಶ ಕೊಟ್ಟಿಲ್ಲ. ನಿಮ್ಮನ್ನು ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಎಂದು ಸಲಹೆ ಮಾಡಿದರು.

ಲಾಕ್‍ಡೌನ್ ಜಾರಿಯಾಗಬಾರದೆಂದರೆ ಸಾಮಾಜಿಕ ಅಂತ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡಿಕೊಂಡು ಶುಚಿತ್ವ ಕಾಪಾಡಿಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಯಾವ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಜನರು ಉದಾಸೀನ ತೋರಿದ್ದಾರೋ ಅಲ್ಲಿ ಕರೊನಾ ಸೋಂಕು ಹೆಚ್ಚಾಗಿದೆ. ನಮ್ಮಲ್ಲಿ ಅಂತಹ ಪರಿಸ್ಥಿತಿ ಬರುವುದು ಬೇಡ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *